Friday, September 22, 2023

Latest Posts

ಅನ್ನದಾತರ ಸಾವಿನ ಸುದ್ದಿಗೆ ಹೆಚ್‌ಡಿಕೆ ಕಣ್ಣೀರು, ಗ್ಯಾರೆಂಟಿ ಸರಕಾರದ ವಿರುದ್ಧ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಮಳೆ ಕೈಕೊಟ್ಟು, ಬರಗಾಲ ತಾಂಡವಾಡುತ್ತಿದೆ. ಈ ಸಮಯದಲ್ಲಿ ಬಿತ್ತಿದ ಬೆಳೆ ಬಾರದೆ ಅನನ್ದಾತ ಸಾವಿನ ಕದ ತಟ್ಟುತ್ತಿದ್ದು, ಇದುವರೆಗೂ ನೂರಾರು ರೈತರು ತಮ್ಮ ಉಸಿರನ್ನೇ ನಿಲ್ಲಿಸಿದ್ದಾರೆ. ಈ ಕುರಿತು ಬಾವುಕ ಟ್ವೀಟ್‌ ಮಾಡಿದ ಮಾಜಿ ಹೆಚ್.ಡಿ.ಕುಮಾರಸ್ವಾಮಿ, ಗ್ಯಾರೆಂಟಿ ಸರಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ತಮ್ಮ ಟ್ವಿಟ್ಟರ್‌ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ..ʻಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವದ ಅರಿವಿಲ್ಲವೆ?ʼ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಈ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ.

ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?

ನನ್ನ ಮನವಿ ಇಷ್ಟೇ..ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಟ್ವೀಟ್‌ ಮೂಲಕ ಟೀಕಾಪ್ರಹಾರ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!