November 15, 2026
Sunday, November 15, 2026
spot_img

ಪಂಜಾಬ್‌ನಲ್ಲಿ ತೀರ್ಥಯಾತ್ರೆಯ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಐವರ ಸಾ*ವು, 15 ಮಂದಿಗೆ ಗಾಯ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ಬಳಿಯ ರಾಷ್ಟ್ರೀಯ ಹೆದ್ದಾರಿ-54ರಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯಾತ್ರಾರ್ಥಿಗಳು ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಂಜಾಬ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ’ಯಡಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಸರ್ಕಾರಿ ಬಸ್‌ಗಳ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ಬಸ್‌ಗಳಲ್ಲಿ ಒಟ್ಟು 37 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದ ಆರು ಮಂದಿಯಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತರ್ನ್ ತರಣ್ ಜಿಲ್ಲಾಧಿಕಾರಿ ನಿರ್ಮಲ್ ಒಸೆಫ್ಚನ್ ಮಾಹಿತಿ ನೀಡಿದ್ದಾರೆ.

ಅಪಘಾತಕ್ಕೆ ಕಾರಣವೇನು?

ಒಂದು ಬಸ್ ಫರೀದ್‌ಕೋಟ್‌ನಿಂದ ಅಮೃತಸರಕ್ಕೆ ತೆರಳುತ್ತಿದ್ದರೆ, ಮತ್ತೊಂದು ಬಸ್ ಅಮೃತಸರದಿಂದ ಮುಕ್ತಸರ್ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ, ಬಸ್ ಚಾಲಕನೊಬ್ಬ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕವನ್ನು ದಾಟಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಯಾತ್ರಾರ್ಥಿಗಳ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಈ ದುರ್ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಕೂಡ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಂಬಾ ತಿಳಿಸಿದ್ದಾರೆ. ಡಿಕ್ಕಿಯ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹಲವು ಪ್ರಯಾಣಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಇದನ್ನೂ ಓದಿ:

ತಕ್ಷಣದ ರಕ್ಷಣಾ ಕಾರ್ಯಾಚರಣೆ

ಅಪಘಾತದ ಸದ್ದು ಕೇಳುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಬಂದು ಬಸ್‌ನೊಳಗೆ ಸಿಲುಕಿದ್ದವರನ್ನು ಹೊರತೆಗೆಯುವ ಮೂಲಕ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದರು. ಮಾಹಿತಿ ತಿಳಿದ ತಕ್ಷಣ ಪೊಲೀಸರು, ರಸ್ತೆ ಸುರಕ್ಷತಾ ಪಡೆ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ದೌಡಾಯಿಸಿದವು. ಗಂಭೀರವಾಗಿ ಗಾಯಗೊಂಡಿರುವ ಐವರು ಅಮೃತಸರದ ಗುರುನಾನಕ್ ದೇವ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ಗಾಯಾಳುಗಳನ್ನು ತರ್ನ್ ತರಣ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಎಸ್‌ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಭಗವಂತ್ ಮಾನ್ ಸಂತಾಪ

ಈ ದುರ್ಘಟನೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ನೌಶೆಹ್ರಾ ಪನ್ನುವಾನ್ ಬಳಿ ತೀರ್ಥಯಾತ್ರೆ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಗಾಯಾಳುಗಳಿಗೆ ಯಾವುದೇ ವಿಳಂಬವಿಲ್ಲದೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ” ಎಂದು ಪ್ರಾರ್ಥಿಸಿದ್ದಾರೆ. ಕಾಂಗ್ರೆಸ್ ಸಂಸದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕೂಡ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

Must Read

Skip to toolbar