ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಂದು ಸುತ್ತಿನ ಕಾನೂನು ಸಂಘರ್ಷಕ್ಕೆ ವೇದಿಕೆಯಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಹಲವು ನಾಯಕರು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ಹಾಗೂ SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ನೇರ ಉತ್ತರ ಪಡೆಯಲು ವಿರೋಧ ಪಕ್ಷಗಳು ಮುಂದಾಗಿವೆ.
ವೈಯಕ್ತಿಕವಾಗಿ ಪ್ರಶ್ನಿಸಲು ಅನುಮತಿ ನೀಡಿ
ನಿಗದಿತ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಪ್ರಮಾಣಪತ್ರ ಸಲ್ಲಿಸಿರುವ ವಿರೋಧ ಪಕ್ಷಗಳು, ಚುನಾವಣಾ ಆಯೋಗದ ಮುಂದೆ ಇರಿಸಲು ಒಟ್ಟು 48 ಪ್ರಶ್ನೆಗಳನ್ನು ಸಿದ್ಧಪಡಿಸಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಇತರ ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು, ವಿವೇಕ್ ಜೋಶಿ ಹಾಗೂ ಚುನಾವಣಾ ಆಯೋಗದ ಮಾಹಿತಿ ತಂತ್ರಜ್ಞಾನ ವಿಭಾಗದ ಮಹಾನಿರ್ದೇಶಕರನ್ನು ವೈಯಕ್ತಿಕವಾಗಿ ಪ್ರಶ್ನಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿವೆ.
ಇದನ್ನೂ ಓದಿ:
ಚುನಾವಣಾ ಆಯೋಗ ಸಲ್ಲಿಸಿರುವ ಪ್ರಮಾಣಪತ್ರವು ಮತಗಳ್ಳತನದ ಆರೋಪಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂಬುದು INDIA ಒಕ್ಕೂಟದ ಆಕ್ಷೇಪವಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ SIR ಸಮರ
SIR ಪ್ರಕ್ರಿಯೆಯಲ್ಲಿ ಜ್ಞಾನೇಶ್ ಕುಮಾರ್ ಅವರು ಉಳಿದ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಇಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಮತದಾರರ ನೋಂದಣಿಗೆ ಸಂಬಂಧಿಸಿದ ಫಾರ್ಮ್-6ನಲ್ಲಿನ ಬದಲಾವಣೆಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಕೋರಿದ್ದ ಮಧ್ಯಂತರ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರು, ಇತರ ಚುನಾವಣಾ ಆಯುಕ್ತರು ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.
ಇದಕ್ಕೆ ಪ್ರತಿಯಾಗಿ ಚುನಾವಣಾ ಆಯೋಗ ಮತ್ತು ಮೂವರು ಆಯುಕ್ತರು ಸುಮಾರು 250 ಪುಟಗಳ ಜಂಟಿ ಪ್ರಮಾಣಪತ್ರ ಸಲ್ಲಿಸಿ, SIR ಪ್ರಕ್ರಿಯೆಯ ಪ್ರಮುಖ ನಿರ್ಧಾರಗಳನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಅನ್ವಯಿಸುವ ಸಾಂವಿಧಾನಿಕ ಪ್ರಕ್ರಿಯೆಯ ಮೂಲಕವಷ್ಟೇ ಪದಚ್ಯುತಗೊಳಿಸಲು ಸಾಧ್ಯ ಎಂದೂ ವಾದಿಸಿದ್ದಾರೆ.



