September 16, 2026
Wednesday, September 16, 2026
spot_img

ಭಾರೀ ಮಳೆ ಎಫೆಕ್ಟ್‌: ಬೆಳಗಾವಿ-ಖಾನಾಪುರ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಹೊಸದಿಗಂತ ವರದಿ ಬೆಳಗಾವಿ:

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಹಾಗೂ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಮಂಗಳವಾರ (ಜುಲೈ 7) ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಹಾಗೆಯೇ ಪಿಯುಸಿ (12ನೇ ತರಗತಿ)ವರೆಗಿನ ಎಲ್ಲಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೆಲವು ಕಡೆ ಸಂಚಾರಕ್ಕೂ ಅಡಚಣೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳದಂತೆ ಹಾಗೂ ಹವಾಮಾನ ಇಲಾಖೆ ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಅಗತ್ಯವಿದ್ದಲ್ಲಿ ಮುಂದಿನ ಪರಿಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !