ಗುಡ್ಡ ಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ: ಸಚಿವ ಕೃಷ್ಣ ಬೈರೇಗೌಡ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡ ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಅತ್ತೂರು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿಯುವುದನ್ನು ತಡೆಯುವ ಅಗತ್ಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಲು 300 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದ್ದು, ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ನುಡಿದರು.

ಹವಾಮಾನ ವೈಪರಿತ್ಯದಿಂದ ಅತಿವೃಷ್ಟಿ ಉಂಟಾಗಿದ್ದು, ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಆಗಸ್ಟ್ ತಿಂಗಳಲ್ಲಿಯೂ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಸಿವಿಲ್ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ನುಡಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಸರ್ಕಾರ ಜಿಲ್ಲಾಡಳಿತದ ಜೊತೆ ಸದಾ ಸ್ಪಂದಿಸಿದೆ ಎಂದು ನುಡಿದರು.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ರಸ್ತೆ, ವಿದ್ಯುತ್ ಪರಿವರ್ತಕ ಮತ್ತು ಕಂಬಗಳು, ಬೆಳೆ ಹಾನಿ ಸೇರಿದಂತೆ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಮುಂಗಾರು ಸಂದರ್ಭದಲ್ಲಿ ರಾಜ್ಯದಲ್ಲಿ ವಿವಿಧ ರೀತಿಯ ರಸ್ತೆ, ವಿದ್ಯುತ್, ಮನೆ, ಗುಡ್ಡ ಕುಸಿತ, ಹೀಗೆ ಹಲವು ರೀತಿಯ ಆಸ್ತಿ ಪಾಸ್ತಿ ಹಾನಿಯಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಜನರು ಸ್ವಯಂ ಪ್ರೇರಣೆಯಿಂದ ಸ್ಥಳಾಂತರವಾಗಬೇಕು. ಜಿಲ್ಲಾಡಳಿತ ಆ ನಿಟ್ಟಿನಲ್ಲಿ ನಿಷ್ಠುರವಾಗಿ ನಡೆದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಸರಕಾರಕ್ಕೆ ಪ್ರಾಣ ಉಳಿಸುವುದು ಮುಖ್ಯ. ಪ್ರಾಣ ಹೋದ ನಂತರ ಪರಿಹಾರ ನೀಡುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರು ಸಹ ಬದಲಾಗಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು,ಶಾಸಕ ಡಾ.ಮಂಥರ್ ಗೌಡ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!