August 30, 2026
Sunday, August 30, 2026
spot_img

ಚಿಕ್ಕಮಗಳೂರಲ್ಲಿ ಮಹಾಮಳೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ಗುಡ್ಡ ಕುಸಿತ, ತುಂಗಾ ನದಿ ತೀರದಲ್ಲಿ ಪ್ರವಾಹ ಭೀತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಇಡೀ ಜಿಲ್ಲೆ ತತ್ತರಿಸಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಅನಾಹುತ ಸಂಭವಿಸುತ್ತಿದ್ದು, ಪ್ರವಾಸಿಗರು ಈ ಕಡೆ ಸುಳಿಯದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ದತ್ತಪೀಠ ಮಾರ್ಗ ಬಂದ್, ನಡುದಾರಿಯಲ್ಲಿ ಸಿಲುಕಿದ ವಾಹನಗಳು:

ಮುಳ್ಳಯ್ಯನಗಿರಿ ಹಾಗೂ ಪಶ್ಚಿಮ ಘಟ್ಟದ ಸುತ್ತಮುತ್ತ ಸತತವಾಗಿ ಸುರಿಯುತ್ತಿರುವ ಮಹಾಮಳೆಗೆ ಮಣ್ಣು ಸಂಪೂರ್ಣ ಸಡಿಲಗೊಂಡಿದೆ. ಪರಿಣಾಮವಾಗಿ ದತ್ತಪೀಠಕ್ಕೆ ತೆರಳುವ ಮಾರ್ಗದ ಕವಿಕಲ್ ಗಂಡಿ ಸಮೀಪ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಅಪಾಯ ತಪ್ಪಿಸಲು ತಡೆಗೋಡೆ ನಿರ್ಮಿಸುತ್ತಿದ್ದ ಸ್ಥಳದಲ್ಲೇ ಈ ದುರಂತ ಸಂಭವಿಸಿದ್ದು, ಅತ್ತಿಗುಂಡಿ ಹಾಗೂ ಮಹಲ್ ಸಂಪರ್ಕ ಕಲ್ಪಿಸುವ ಪ್ರಮುಖ ದಾರಿ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ವಾಹನ ಸವಾರರು ನಡುದಾರಿಯಲ್ಲೇ ಸಿಲುಕಿಕೊಳ್ಳುವಂತಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿದ್ದಾರೆಯಾದರೂ, ಮತ್ತೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

ಇದನ್ನೂ ಓದಿ:

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ:

ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿರುವುದರಿಂದ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಘಾಟ್ ರಸ್ತೆ ಹಾಗೂ ಜಲಪಾತಗಳ ಕಡೆಗೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !