ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಉಭಯ ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು ಮತ್ತು 1 ರಿಂದ 10 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.