ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವೈನಾಡು ಹಾಗೂ ಕೊಡಗಿನ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕಬಿನಿ ಹಾಗೂ ಹಾರಂಗಿ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.
ಕೇರಳದ ವೈನಾಡಿನಲ್ಲಿ ಮಳೆರಾಯ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಹರಿಯುವ ಒಳಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಪ್ರಸ್ತುತ ಅಣೆಕಟ್ಟೆಗೆ ಭಾರಿ ಪ್ರಮಾಣದ ನೀರು ತಲುಪುತ್ತಿದ್ದು, ನದಿ ನೀರು ಹಂಚಿಕೆ ಸಂಘರ್ಷದ ನಡುವೆ ಕಾವೇರಿ ಜಲಾನಯನ ಪ್ರದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ, ಇದರಿಂದ ಸಂಪೂರ್ಣ ಭರ್ತಿಯಾಗುವ ಹಂತ ತಲುಪಿದೆ.
ಪ್ರಸ್ತುತ ಅಣೆಕಟ್ಟೆಗೆ 15,500 ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. 2,284 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಈಗ 2,280 ಅಡಿಯಷ್ಟು ನೀರು ಭರ್ತಿಯಾಗಿದೆ. ಇಂದೇ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.



