ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ವರುಣ ತನ್ನ ಅಬ್ಬರ ಮುಂದುವರೆಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ನಿನ್ನೆ ಸಹ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಇಂದು ಮತ್ತೆ ತೀವ್ರ ಮಳೆಯ ಸಾಧ್ಯತೆ ಇದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರ್ನಾಟಕದಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಂಭವವಿದೆ. ನಿರಂತರ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ ಭೀತಿ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದೆ.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಮೀನುಗಾರರಿಗೆ ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.