ಹೊಸ ದಿಗಂತ ಡಿಜಿಟಿಲ್ ಡೆಸ್ಕ್:
ರಾಜ್ಯಾದ್ಯಂತ ಮುಂದಿನ ಏಳು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಪ್ರಮುಖವಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಳೆಯೊಂದಿಗೆ ಬಲವಾದ ಮೇಲ್ಮೈ ಗಾಳಿಯೂ ಸಹ ನಿರೀಕ್ಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರದಿಂದಿರಬೇಕು ಎಂದು ಹೇಳಿದೆ.
ಜುಲೈ 15 ರಿಂದ 21 ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಮುಂತಾದ ನಿರ್ದಿಷ್ಟ ಜಿಲ್ಲೆಗಳಲ್ಲಿ ಜುಲೈ 20 ಮತ್ತು 21 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು (ಗ್ರಾಮೀಣ ಮತ್ತು ನಗರ), ಮೈಸೂರು ಮತ್ತು ಮಂಡ್ಯ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಜುಲೈ 16 ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ ಬಾಗಲಕೋಟೆ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಹಗುರದಿಂದ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.