ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳ ಜನರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮೀನು ಹಿಡಿಯಲು ತೆರಳದಂತೆ ಹಾಗೂ ಬೋಟ್‌ಗಳು ಸಮುದ್ರದೊಳಗೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಅಂದರೆ ಸೋಮವಾರ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜೊತೆಗೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಮತ್ತು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.