ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.
ರಸ್ತೆ ಬಂದ್ ಆಗಿರುವ ಪರಿಣಾಮ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.