ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರೂ, ಇದೀಗ ಹಿಂಗಾರು ಮಳೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ.
ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಇದೇ ವೇಳೆ, ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಈ ಭಾಗಗಳ ಜನರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.
ಇದನ್ನೂ ಓದಿ:
ರಾಷ್ಟ್ರೀಯ ಹೆದ್ದಾರಿಯಲ್ಲೂ ಮಳೆ ಅವಾಂತರ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಾಂಚನ ಬಳಿ ಹಳ್ಳದ ನೀರು ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹರಿದುಬಂದಿದೆ. ಇದರಿಂದ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ಭಾಗದಲ್ಲಿಯೂ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಒಣಗಲಾರಂಭಿಸಿದ್ದ ಬೆಳೆಗಳಿಗೆ ತೇವ ದೊರೆತಿದೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ತುಂತುರು ಮಳೆ ಆರಂಭವಾಗಿದ್ದು, ಮೆಖ್ರಿ ವೃತ್ತ, ಹೆಬ್ಬಾಳ, ಬಸವೇಶ್ವರನಗರ ಮತ್ತು ಕೆ.ಆರ್. ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.



