ಹೊಸದಿಗಂತ ವರದಿ ಕುಶಾಲನಗರ/ಮಡಿಕೇರಿ:
ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ.
ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 18ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಶ್ ಮಾಹಿತಿ ನೀಡಿದ್ದಾರೆ.
ಅಣೆಕಟ್ಟೆಗೆ 11,800 ಕ್ಯುಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾಗಿ ಬರುತ್ತಿರುವ ನೀರನ್ನು ನದಿಗೆ ಮುಖ್ಯ ಬಾಗಿಲು ಮತ್ತು ವಿದ್ಯುತ್ ಘಟಕದ ಮೂಲಕ ನದಿಗೆ ಹರಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಐ ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.
ಅಣೆಕಟ್ಟೆಯಿಂದ ಹೆಚ್ಚುವರಿಯಾಗಿ ನೀರನ್ನು ನದಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿನ ಗ್ರಾಮಸ್ಥರು, ಸಾರ್ವಜನಿಕರು ನದಿಯ ಅಂಚಿಗೆ ತಮ್ಮ ಜಾನುವಾರುಗಳನ್ನು ಬಿಡದಂತೆ ಹಾಗೂ ನದಿ ತೀರದ ಮನೆಯವರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆಯ ವತಿಯಿಂದ ಸೂಚನೆ ನೀಡಲಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಶನಿವಾರ ನೀರಿನ ಮಟ್ಟವನ್ನು 2857.83 ಅಡಿಗಳಿಗೆ ಕಾಯ್ದಿರಿಸಿಕೊಂಡು ಜಲಾಶಯದಿಂದ 18 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದ ನೀರಿನಮಟ್ಟ 2855.46 ಅಡಿಗಳಾಗಿದ್ದರೆ, ನದಿಗೆ 3000 ಕ್ಯುಸೆಕ್ ಹಾಗೂ ನಾಲೆಗೆ 500 ಕ್ಯುಸೆಕ್ ನೀರನ್ನು ಹೊರ ಬಿಡಲಾಗಿತ್ತು.



