ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಚೇತರಿಸಿಕೊಳ್ಳುವ ಮೊದಲೇ, ಬಂಗಾಳಕೊಲ್ಲಿಯಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಣಾಮ ಭಾಗ್ಯನಗರದಲ್ಲಿ ಭಾರಿ ಮಳೆಯಾಗುತ್ತಿದೆ.
ಇಲ್ಲಿನ ಎಲ್ ಬಿ ನಗರ, ವನಸ್ಥಲಿಪುರಂ, ಹಯತ್ನಗರ, ಅಬ್ದುಲ್ಲಾಪುರಮೆಟ್ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಹೊಂಡದಂತೆ ಕಂಡುಬಂದಿದೆ.
ರಾಮೋಜಿ ಫಿಲ್ಮ್ ಸಿಟಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರುಣನ ಅಬ್ಬರವಿದ್ದು, ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಳಕಾಲವರೆಗೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ನಗರದಲ್ಲಿ ಗುರುವಾರ ಮಧ್ಯಾಹ್ನದಿಂದ ಆರಂಭವಾದ ಮಳೆ, ಒಂದೇ ದಿನದಲ್ಲಿ 10 ಸೆಂಟಿ ಮೀಟರ್ ಸುರಿದಿದೆ. ಹಯತ್ನಗರದಲ್ಲಿ ಹೆದ್ದಾರಿ ಜಲಾವೃತವಾಗಿದ್ದು, ನಗರದ ಹೊರ ಭಾಗದ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಸಂಚಾರ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.