ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಮಂಗಳೂರಿನ ದೇರಳಕಟ್ಟೆಯ ಮೊಂಟೆದಪದವು ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು, ಏಳು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾಳೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.
ಮಳೆ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಉಭಯ ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.