ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಆಗಸ್ಟ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್ ಅಲರ್ಟ್, ಆ.2 & 3ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.31, ಆಗಸ್ಟ್ 1ರಂದು ಆರೆಂಜ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.2, 3ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಆ.1ರಂದು ಆರೆಂಜ್ ಅಲರ್ಟ್, ಬೆಳಗಾವಿ ಜಿಲ್ಲೆಯಲ್ಲಿ ಜು.30, 31, ಆಗಸ್ಟ್ 1, 2ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಅವಘಡಗಳು ಹೆಚ್ಚುತ್ತಿವೆ. ಒಂದು ವಾರದ ಹಿಂದಷ್ಟೇ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ.