ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
‘ತೌಕ್ತೆ’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮೇ 20ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ಪ್ರಸ್ತುತ ಪೂರ್ವ ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿದ್ದು, ಇದು, ಇನ್ನಷ್ಟು ತೀವ್ರಗೊಂಡು ಉತ್ತರ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆಗಳಿವೆ. ರಾಜ್ಯದ ಕರಾವಳಿಯನ್ನು ದಾಟಿ, ಮೇ 18ರಂದು ಗುಜರಾತ್ ಕರಾವಳಿ ತಲುಪಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು.
ಚಂಡಮಾರುತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 16 ರವರೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಸಮಯದಲ್ಲಿ ಗರಿಷ್ಠ 20 ಸೆಂ.ಮೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ವಿವರಿಸಿದರು.
ಮೇ 17ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಹಾವೇರಿ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮಂಡ್ಯ, ಮೈಸೂರಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಕರಾವಳಿಯಲ್ಲಿ ಚಂಡಮಾರುತದ ತೀವ್ರತೆ ಇರುವುದರಿಂದ ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಮುಂದಿನ ಐದೂ ದಿನ ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.