ಹಾವೇರಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಹಕಾರ ಕೋರಿದ ಸಚಿವ ಹೆಬ್ಬಾರ

ಹೊಸ ದಿಗಂತ ವರದಿ, ಹಾವೇರಿ :

ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಾದರಿಯಾಗಬೇಕು. ಅದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲ ಕನ್ನಡ ಅಭಿಮಾನಿಗಳ ಸಹಕಾರ ಅತ್ಯಗತ್ಯ ಎಂದು ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಸಮ್ಮೇಳನ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ, ವಿವಿಧ ವೇದಿಕೆ ನಿರ್ಮಾಣದ ಪ್ರಗತಿ ವೀಕ್ಷಿಸಿ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವು ಇಲ್ಲಿನ ಅಸ್ಮಿತೆಯನ್ನು ಬಿಂಬಿಸುವ ಭವ್ಯ ಕಾರ್ಯಕ್ರಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಬರುವ ಎಲ್ಲರಿಗೂ ಪ್ರತ್ಯೇಕ ನೋಂದಣಿ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಮ್ಮೇಳನ ಸ್ಥಳಕ್ಕೆ ಹೋಗಲು ಸಾರಿಗೆ ವ್ಯವಸ್ಥೆ, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಊಟ ಉಪಹಾರದ, ಕುಡಿಯುವ ನೀರು ಹೀಗೆ ಎಲ್ಲವನ್ನು ಸುವ್ಯವಸ್ಥಿತ ರೀತಿಯಿಂದ ನಿರ್ವಹಿಸಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ನೀಡಿದರು.
ಶಾಸಕ ನೆಹರು ಓಲೇಕಾರ ಮಾತನಾಡಿ ಎಲ್ಲರಲ್ಲಿಯೂ ಸಹಕಾರ ಸಮನ್ವಯತೆ ಇದ್ದಾಗ ಕಾರ್ಯಕ್ರಮವು ಯಶಸ್ವಿಯಾಗುತ್ತದೆ ಸಮ್ಮೇಳನವು ಅದ್ಧೂರಿಯಾಗಿ ಆಗುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತಿದೆ ಇದರೊಂದಿಗೆ ನಾಡಿನ ಎಲ್ಲರ ಸಹಕಾರ ಇರಬೇಕು. ಮಾಧ್ಯಮಗಳು ಜಿಲ್ಲೆಯ ವೈವಿಧ್ಯತೆಗಳನ್ನು ನಾಡಿಗೆ ಬಿಂಬಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಮನವಿ ಮಾಡಿಕೊಂಡರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಶಿ ಮಾತನಾಡಿ, ಸಮ್ಮೇಳನಕ್ಕೆ ಬೇಕಾದ ಎಲ್ಲ ತಯಾರಿಯನ್ನು ಅತ್ಯಂತ ನಿಷ್ಠೆಯಿಂದ ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಮಾಡಲಾಗುತ್ತಿದೆ. ನಾವೆಲ್ಲರೂ ಕೂಡಿಕೊಂಡು ಕನ್ನಡದ ತೇರು ಎಳೆಯೋಣ, ಅಕ್ಷರ ಹಬ್ಬ ಮಾಡೋಣ ಎಂದರು.
ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಕನ್ನಡ ಸಾಹಿತ್ಯ ಪರಿಷತ್ ನಿರ್ವಹಿಸುತ್ತಿದೆ. ಸಮ್ಮೇಳನಕ್ಕೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸುವುದು, ಹಣಕಾಸಿನ ನಿರ್ವಹಣೆಯನ್ನು ಜಿಲ್ಲಾಡಳಿತ ನಿರ್ವಹಿಸುತ್ತಿದೆ. ಹಣಕಾಸಿನ ನಿರ್ವಹಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹಸ್ತಕ್ಷೇಪ ಇರುವುದಿಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.
ಜಿ.ಪಂ ಸಿಇಓ ಮಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!