January16, 2026
Friday, January 16, 2026
spot_img

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರ ಹೃದಯಭಾಗದಲ್ಲಿರುವ ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿದೆ. ಸ್ಫೋಟದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡಿನ ಮಂಜುಳಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಸುಮಾರು 8.30ರ ವೇಳೆಗೆ ಜಯಮಾರ್ತಂಡ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಹೀಲಿಯಂ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಬಲೂನ್ ವ್ಯಾಪಾರಿ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಮಂಜುಳಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸ್ಫೋಟದ ಹಿನ್ನೆಲೆ ತಿಳಿಯಲು ಇಂದು ಕೂಡ ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ತದ ಮಾದರಿ ಸೇರಿದಂತೆ ಹಲವು ಸ್ಯಾಂಪಲ್‌ಗಳನ್ನು ಸಂಗ್ರಹಿಸಿದೆ. ಪ್ರಕರಣದ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಫೋಟ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎಂಬುದರ ಕುರಿತು ಸ್ಪಷ್ಟತೆ ಪಡೆಯಲು ತನಿಖೆ ತೀವ್ರಗೊಂಡಿದೆ.

Must Read

error: Content is protected !!