ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೋರೆನ್ ಜಾರ್ಖಂಡ್‌ನ 14 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೋರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಹೇಮಂತ್ ಸೋರೆನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ ನಂತರ ತಮ್ಮ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಹೇಳಿದ್ದಾರೆ.
ಸಮಾರಂಭದಲ್ಲಿ I.N.D.I.A ಬ್ಲಾಕ್‌ನ ಪ್ರಮುಖ ಸದಸ್ಯರು ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, NCP (SP) ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಬುಧವಾರ ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಹೇಮಂತ್ ಸೋರೆನ್, “ಈ ಮಹತ್ವದ ಸಂದರ್ಭದಲ್ಲಿ ಇಂತಹ ಗೌರವಾನ್ವಿತ ನಾಯಕರು ನಮ್ಮೊಂದಿಗೆ ಸೇರಿಕೊಳ್ಳುವುದು ಹರ್ಷದಾಯಕವಾಗಿದೆ” ಎಂದು ಹೇಳಿದ್ದಾರೆ.