ಹೊಸದಿಗಂತ ವರದಿ ಹಾಸನ:
ಬೇಲೂರು ತಾಲ್ಲೂಕಿನ ತಗರೆ–ತೊಳಲು ರಸ್ತೆಯ ಚೌಡನಹಳ್ಳಿ ಗಡಿ ಸಮೀಪ ಬೃಹತ್ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ರಸ್ತೆ ಸಮೀಪವೇ ಆನೆಗಳು ಸಂಚರಿಸುತ್ತಿರುವುದರಿಂದ ಈ ಮಾರ್ಗದಲ್ಲಿ ಓಡಾಡುವವರು ಜೀವಭಯದಲ್ಲೇ ಪ್ರಯಾಣಿಸುವಂತಾಗಿದೆ.
ಚೌಡನಹಳ್ಳಿ ಗಡಿ ಸುತ್ತಮುತ್ತ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದರಿಂದ ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಆತಂಕ ಎದುರಿಸುತ್ತಿದ್ದಾರೆ. ರಸ್ತೆ ಬದಿಯಲ್ಲೇ ಆನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಯಾವ ಕ್ಷಣದಲ್ಲಿ ಅಪಾಯ ಎದುರಾಗಬಹುದು ಎಂಬ ಭೀತಿಯೊಂದಿಗೆ ಸಂಚರಿಸುವಂತಾಗಿದೆ.
ಬೇಲೂರು ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದು, ಇದೀಗ ಚೌಡನಹಳ್ಳಿ ಗಡಿ ಬಳಿ ಆನೆಗಳ ದಂಡು ಪ್ರತ್ಯಕ್ಷವಾಗಿರುವುದು ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ. ಆನೆಗಳು ಏಕಾಏಕಿ ರಸ್ತೆಗೆ ಬಂದರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದರ ಜತೆಗೆ ಅಪಘಾತ ಸಂಭವಿಸುವ ಅಪಾಯವೂ ಇದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಕಾಡಾನೆಗಳ ಚಲನವಲನದ ಮೇಲೆ ನಿಗಾ ಇರಿಸಬೇಕು. ಸರ‍್ವಜನಿಕರಿಗೆ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಆನೆಗಳನ್ನು ಸುರಕ್ಷಿತವಾಗಿ ಕಾಡಿನತ್ತ ಮರಳಿಸಲು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದ ಜನರು ಹಾಗೂ ತೋಟದ ಕಾರ್ಮಿಕರಿಗೆ ಸುರಕ್ಷತೆಗೆ ಧಕ್ಕೆಯಾಗದಂತೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಭಾಗದಲ್ಲಿ ಆನೆಗಳ ಸಂಚಾರದ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಮೂಲಕ ಸಂಭವನೀಯ ಅನಾಹುತಗಳನ್ನು ತಡೆಯಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.



