Saturday, October 18, 2025

ಕರ್ನಾಟಕದ 20+ ಜಿಲ್ಲೆಗಳಲ್ಲಿ ಹೈ ಅಲರ್ಟ್: ಸಮುದ್ರದ ಅಬ್ಬರಕ್ಕೆ ಕರಾವಳಿ ಮಂದಿ ತಟ್ಟೆಯಲ್ಲಿ ‘ಮೀನು’ ಮಿಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಾಳೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದರೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

ಮಳೆ ಅಬ್ಬರ ಎಲ್ಲಿ ಹೇಗಿದೆ?
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶ: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹವಾಮಾನ ವೈಪರೀತ್ಯದ ಕಾರಣ, ಮುನ್ನೆಚ್ಚರಿಕೆಯಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು: ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ರಾಜಧಾನಿಯಲ್ಲಿ ಮಳೆ, ತಾಪಮಾನ ಎಷ್ಟಿದೆ?
ಬೆಂಗಳೂರು ನಗರದಲ್ಲಿಯೂ ನಾಳೆ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದ್ದು, ಶೇಕಡಾ 69ರಿಂದ 100ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 12-15 ಕಿ.ಮೀ. ಇರಲಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ತಲುಪುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!