ಹೊಸದಿಗಂತ ಡಿಜಿಟಲ್ ಡೆಸ್ಕ್:
40 ಲಕ್ಷ ರೂ. ಹಣದ ಸಮೇತವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ ಅಧಿಕಾರಿ ಮಾಡಾಳು ಪ್ರಶಾಂತ್ ಪ್ರಕರಣದಲ್ಲಿ ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ಕೊಟ್ಟಿದ್ದು, ಜೊತೆಗೆ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮಾರ್ಚ್ ತಿಂಗಳಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರ ಕಚೇರಿಯಲ್ಲಿ ಲಂಚ ಪಡೆಯುವಾಗ 40 ಲಕ್ಷ ರೂ. ಸಮೇತವಾಗಿ ಲೋಕಾಯಕ್ತರಿಗೆ ಅವರ ಪುತ್ರ ಮಾಡಾಳು ಪ್ರಶಾಂತ್ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರನ್ನು ಕೂಡ ಆರೋಪಿಯನ್ನಾಗಿ ಮಾಡಿದ್ದರು.
ಬಳಿಕ ವಿರುಪಾಕ್ಷಪ್ಪ ಅವರು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಸಾರ್ವಜನಿಕರ ಮುಂದೆ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಗೆ ಮಾಡಾಳು ವಿರುಪಾಕ್ಷಪ್ಪ ಅವರನ್ನು ವಶಕ್ಕೆ ಪಡೆಯಲು ನ್ಯಾಯಾಲಯದ ಅನುಮತಿ ನೀಡಿದ ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದಾದ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡುತ್ತಿದ್ದು, ಪ್ರಕರಣದ ಅಪ್‌ಡೇಟ್ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತಿದ್ದರು.
ಈಗ ನ್ಯಾಯಾಲಯ 40 ಲಕ್ಷ ರೂ. ನಗದು ಹಣದ ಸಮೇತವಾಗಿ ಮಾಡಾಳು ವಿರುಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದ ಪ್ರಕರಣದಲ್ಲಿ ಮಾಜಿ ಶಾಸಕರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಜೊತೆಗೆ ಲೋಕಾಯುಕ್ತ ಪೊಲೀಸರಿಂದ ಮಾಡಾಳು ವಿರೂಪಾಕ್ಷ ವಿರುದ್ಧದ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ.
ವಿಧಾನಸಭಾ ಸ್ಪೀಕರ್ ಅನುಮತಿ ಪಡೆಯದೇ ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಲಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ರಿಲೀಫ್ ಪಡೆದುಕೊಂಡಿದ್ದಾರೆ.