October 17, 2026
Saturday, October 17, 2026
spot_img

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿ ತನಿಖೆಗೆ ಕೂಡಲೇ ಅನುಮತಿ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಭ್ರಷ್ಟಾಚಾರದ ಕುರಿತು ಅತ್ಯಂತ ಕಠಿಣ ಮಾತುಗಳಲ್ಲಿ ಎಚ್ಚರಿಕೆ ನೀಡಿದೆ.

“ಭ್ರಷ್ಟಾಚಾರ ಎನ್ನುವುದು ಕ್ಯಾನ್ಸರ್ ಮತ್ತು ಪ್ಲೇಗ್ ಇದ್ದಂತೆ” ಸುಪ್ರೀಂಕೋರ್ಟ್ ನೀಡಿದ್ದ ಈ ಹೇಳಿಕೆಯನ್ನು ಉಲ್ಲೇಖಿಸಿದ ಹೈಕೋರ್ಟ್, ಭ್ರಷ್ಟಾಚಾರವನ್ನು ಹಾಗೆಯೇ ಬಿಟ್ಟರೆ ಅದು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನೇ ಅಸ್ಥಿರಗೊಳಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿತು.

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಲಕ್ಷಾಂತರ ಸಂಖ್ಯೆಯ ಬಟ್ಟೆ ಬ್ಯಾಗ್‌ಗಳನ್ನು ದುಬಾರಿ ಬೆಲೆಗೆ ಖರೀದಿಸಿ, ಅದರಲ್ಲಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ದೂರು ಕೇಳಿಬಂದಿತ್ತು. ಈ ಹಗರಣದ ತನಿಖೆಗೆ ಈ ಹಿಂದೆ ತಾಂತ್ರಿಕ ಕಾರಣಗಳಿಂದ ಹಿನ್ನಡೆಯಾಗಿತ್ತು, ಆದರೆ ಈಗ ಹೈಕೋರ್ಟ್ ಆದೇಶವು ತನಿಖಾ ಸಂಸ್ಥೆಗಳಿಗೆ ಹೊಸ ಬಲ ನೀಡಿದೆ.

ಈ ಆದೇಶದಿಂದಾಗಿ ಮುಂದಿನ ದಿನಗಳಲ್ಲಿ ಸಿಂಧೂರಿ ಅವರಿಗೆ ಕಾನೂನು ಸಂಕಷ್ಟ ಎದುರಾಗುವುದು ಬಹುತೇಕ ಖಚಿತವಾದಂತಿದೆ.

Must Read