ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡನೇ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಿಗೆ ಹೈಕೋರ್ಟ್ ಅವಕಾಶ ನೀಡಿದ್ದರೂ, ಬಂಧನಕ್ಕೊಳಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಈ ಆದೇಶದ ಪ್ರತಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ ಅವರು ತಕ್ಷಣ ಇ-ಮೇಲ್ ಮೂಲಕ ಚಿತ್ರದುರ್ಗ ಜೈಲು ಅಧಿಕಾರಿಗಳಿಗೆ ರವಾನಿಸಿ ಆದಷ್ಟು ಶೀಘ್ರದಲ್ಲಿ ಬಿಡುಗಡೆ ಕ್ರಮ ವಹಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ಶರಣರನ್ನು ಬಂಧಿಸಿ, ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣರನ್ನು ಹಾಜರುಪಡಿಸಿದ್ದರು. ಅವರನ್ನು ಡಿ.2ರವೆರಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಅವರನ್ನು ಬಿಡುಗಡೆ ಮಾಡುವಂತೆಯೂ ಸೂಚಿಸಿದೆ.