April 23, 2026
Thursday, April 23, 2026
spot_img

ನ್ಯಾಯಾಂಗದ ಗೌರವಕ್ಕೆ ಧಕ್ಕೆ: ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ವಿರುದ್ಧ ಹೈಕೋರ್ಟ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಹಗರಣದ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ನಡೆದ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ನೋಟಿಸ್ ನೀಡಿದೆ.

ಹೊಸ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ವೈಯಕ್ತಿಕವಾಗಿ ಹಾಜರಾಗಿ ವಾದ ಮಂಡಿಸಿದ್ದರು. ಈ ವೇಳೆ ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರ ಮುಂದೆ ಕೇಜ್ರಿವಾಲ್ ವಾದಿಸುತ್ತಿರುವ ವಿಡಿಯೋ ತುಣುಕುಗಳು ಫೇಸ್‌ಬುಕ್, ಎಕ್ಸ್ ಮತ್ತು ಯೂಟ್ಯೂಬ್‌ನಲ್ಲಿ ವ್ಯಾಪಕವಾಗಿ ಹರಿದಾಡಿದ್ದವು.

ನ್ಯಾಯಾಲಯದ ಒಳಗಿನ ವಿಚಾರಣೆಯ ವಿಡಿಯೋಗಳನ್ನು ರೆಕಾರ್ಡ್ ಮಾಡುವುದು ಮತ್ತು ಅದನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದು ನ್ಯಾಯಾಂಗದ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂತಹ ಕೃತ್ಯಗಳು ನ್ಯಾಯಾಂಗದ ಘನತೆ ಮತ್ತು ಗೌರವಕ್ಕೆ ಕುಂದು ತರುತ್ತವೆ ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ, ವಿಡಿಯೋಗಳನ್ನು ತಕ್ಷಣವೇ ತೆಗೆದುಹಾಕುವಂತೆ ಗೂಗಲ್, ಎಕ್ಸ್, ಮತ್ತು ಫೇಸ್‌ಬುಕ್ ಸೇರಿದಂತೆ ಎಲ್ಲಾ ಸರ್ಚ್ ಇಂಜಿನ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಮಧ್ಯಸ್ಥಗಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಕೇವಲ ಕೇಜ್ರಿವಾಲ್ ಮಾತ್ರವಲ್ಲದೆ, ಈ ವಿಡಿಯೋಗಳನ್ನು ತಮ್ಮ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ಮತ್ತು ಹಂಚಿಕೊಂಡ ಪತ್ರಕರ್ತ ರವೀಶ್ ಕುಮಾರ್ ಸೇರಿದಂತೆ ಇತರ ವ್ಯಕ್ತಿಗಳಿಗೂ ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದು, ವಿವರಣೆ ಕೇಳಿದೆ. ಈ ಮೂಲಕ ನ್ಯಾಯಾಲಯದ ಪ್ರಕ್ರಿಯೆಗಳನ್ನು ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಬಳಸಿಕೊಳ್ಳುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !