ಹಿಜಾಬ್ ವಿವಾದ: ಪ್ರೌಢಶಾಲೆ-ಕಾಲೇಜುಗಳಿಗೆ 3 ದಿನ ರಜೆ; ಪರೀಕ್ಷೆಗಳು ಅಬಾಧಿತ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಜ್ಯದ ನಾನಾ ಭಾಗಗಳ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಫೆ. 9ರಿಂದ 11ರವರೆಗೆ ರಾಜ್ಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಈಗಾಗಲೇ ನಡೆಯುತ್ತಿರುವ ಎಂಜಿನಿಯರಿಂಗ್, ಸ್ನಾತಕೋತ್ತರ ಮತ್ತಿತರ ಪರೀಕ್ಷೆಗಳು ಎಂದಿನಂತೆ ನಡೆಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಅನುದಾನಿತ ಮತ್ತು ಅನುದಾನ ರಹಿತ‌ ಶಾಲಾ ಕಾಲೇಜುಗಳಿಗೂ ರಜೆ ಆದೇಶ ಅನ್ವಯವಾಗಲಿದೆ. ಡಿಪ್ಲೊಮಾ ತರಗತಿಗಳು ಕೂಡ ಇರುವುದಿಲ್ಲ.

ಮಂಗಳವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ವಿವಾದ ಸದ್ಯಕ್ಕೆ ನ್ಯಾಯಾಲಯದ ಮುಂದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು ಎಂದು ಮನವಿ ಮಾಡಿದರು.

ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ. ಆದರೆ ಎರಡೂ ಕಡೆಯವರು ಹಠ ಹಿಡಿದಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಅಂತಿಮವಾಗಿ ಎಲ್ಲರೂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಯಾರೂ ಕಾನೂನನ್ನು ಕೈಗೆತ್ತಿ ಕೊಳ್ಳಬಾರದು. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಸಚಿವ ಅಶ್ವತ್ಥನಾರಾಯಣ್ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!