ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್‌ರಾಜ್‌ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿಕೆಶಿ ದಂಪತಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರೂ ಕೂಡ ಸಾಥ್ ನೀಡಿದರು.
ಗಂಗಾ, ಯಮುನಾ ಮತ್ತು ಸರಸ್ವತಿ ಎಂಬ ಮೂರು ನದಿಗಳ ಸಂಗಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ಡಿಕೆಶಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದು, ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಪವಿತ್ರ ಸ್ನಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕುಂಭಮೇಳವನ್ನು ಇಷ್ಟೊಂದು ಪವಿತ್ರ ರೀತಿಯಲ್ಲಿ ನಡೆಸಿದ್ದಕ್ಕಾಗಿ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಇಲ್ಲಿ ನೆರೆದಿರುವ ಲಕ್ಷಾಂತರ ಜನರು ವ್ಯವಸ್ಥೆಗಳನ್ನು ವೀಕ್ಷಿಸುತ್ತಿದ್ದಾರೆ. ಅಂತಹ ಕಾರ್ಯಕ್ರಮವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ ಎಂದು ನನಗೆ ಅರ್ಥವಾಗಿದೆ. ಇದನ್ನು ಸಾಧ್ಯವಾಗಿಸಲು ಎಷ್ಟು ಶ್ರಮ ಬೇಕಾಗುತ್ತದೆ ಎಂದು ನನಗೆ ತಿಳಿದಿದೆ ಎಂದು ಹೇಳಿದರು.