ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಮಂಡಲ ಬಜೆಟ್ ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುಶಃ ಈ ಕುರಿತು ಚರ್ಚಿಸಲಿದ್ದೇವೆ. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸರ್ಕಾರದಿಂದ ಇಲಾಖೆಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಆಡಳಿತ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಮಧ್ಯೆ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ಸುಳಿವು ನೀಡಿ, ಸಚಿವ ಸಂಪುಟದ ಸಹೋದ್ಯೋಗಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.