ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿದ್ದು, ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಬೇಸಿಗೆ ರಜೆ ಕೊನೆಗೊಳ್ಳುವವರೆಗೆ ಅಂದರೆ ಮೇ ವರೆಗೆ ಶಿಬಿರಗಳನ್ನು ನಡೆಸಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ಹದಿನೈದು ದಿನಗಳ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತದೆ. ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣು ಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರ ಚಟುವಟಿಕೆಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.
ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯಿತಿ ಪುನರ್ವಸತಿ ಕಾರ್ಯಕರ್ತರು ಮತ್ತು ಸ್ವಯಂ ಸೇವಕರನ್ನು ಇದಕ್ಕೆ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.