ಪವಿತ್ರ ಮೃತ್ತಿಕೆ ಸಂಗ್ರಹಣಾ ಕಾರ್ಯಕ್ಕೆ ಸಚಿವ ಬಿ.ಸಿ.ನಾಗೇಶ್ ಚಾಲನೆ

ಹೊಸ ದಿಗಂತ ವರದಿ, ಮಡಿಕೇರಿ:

ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಅವರು ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ನಗರದ ಓಂಕಾರೇಶ್ವರ ದೇವಾಲಯ, ಕೋಟೆ ಹಾಗೂ ಗದ್ದಿಗೆಯಲ್ಲಿನ ಪವಿತ್ರ ಮೃತ್ತಿಕೆಯನ್ನು ನಾಡಪ್ರಭು ಕೆಂಪೇಗೌಡರ ರಥಯಾತ್ರೆ ವಾಹನದಲ್ಲಿ ಸಂಗ್ರಹಿಸಿಟ್ಟರು. ಬಳಿಕ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಲಿರುವ ಪವಿತ್ರ ಮೃತ್ತಿಕೆ ಸಂಗ್ರಹಣೆ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು, ನ. 11 ರಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಿಸಿರುವ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪವಿತ್ರ ಮಣ್ಣು ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಭಾರತದ ಸ್ವಾತಂತ್ರ್ಯ ಪೂರ್ವ ಸಂದರ್ಭದಲ್ಲಿ ರಾಷ್ಟ್ರ ಅಭಿವೃದ್ಧಿಗೆ ರಾಜ ಮಹಾರಾಜರ ಕೊಡುಗೆ ಅಪಾರವಾಗಿದೆ. ಆ ಸಾಲಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಸೇರುತ್ತಾರೆ. ಕೆಂಪೇಗೌಡರ ಆದರ್ಶ ಆಡಳಿತ ಪ್ರತಿಯೊಬ್ಬರ ಮನೆಗೆ ತಲುಪಬೇಕು. ಆ ನಿಟ್ಟಿನಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ ಎಂದರು.
ರಾಷ್ಟ್ರದ ಪ್ರಥಮ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಯಂತೆ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸರ್ಕಾರದಿಂದ ನಿರ್ಮಿಸಲಾಗಿದ್ದು, ರಥಯಾತ್ರೆ ಮೂಲಕ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜ್, ತಹಶೀಲ್ದಾರ್ ಪಿ.ಎಸ್. ಮಹೇಶ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ನಗರಸಭೆ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪ್ರಮುಖರು ಇದ್ದರು.
ಆದರ್ಶ ಆಡಳಿತಗಾರ ಕೆಂಪೇಗೌಡರ ರಥಯಾತ್ರೆ ಸಂದರ್ಭದಲ್ಲಿ ಮಡಿಕೇರಿ ನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ಚಾಲನೆ ಬಳಿಕ ನಗರದ ಜಿಲ್ಲಾಡಳಿತ ಭವನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ಮಾರ್ಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಕಳುಹಿಸಿಕೊಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!