ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದರು.
ಆಗಸ್ಟ್ 5 ರಂದು ಕಲಬುರಗಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಜುಲೈ ತಿಂಗಳಿನಿಂದಲೇ ಉಚಿತ ವಿದ್ಯುತ್ ಕೊಡಲಾಗುತ್ತಿದ್ದು, ಅದರ ಬಿಲ್‌ಅನ್ನು ಆಗಸ್ಟ್ ತಿಂಗಳಲ್ಲಿ ಕೊಡುತ್ತಿದ್ದೇವೆ. ಗೃಹಜ್ಯೋತಿ ಯೋಜನೆಗೆ ಇದುವರೆಗೂ 1ಕೋಟಿ 45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.