ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ ಎಂಬ ವರದಿಗಳಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತೆರೆ ಎಳೆದಿದ್ದಾರೆ. ಮಹಾರಾಷ್ಟ್ರ ಪೊಲೀಸರು ನೀಡಿರುವ ಈ ಮಾಹಿತಿ ಸತ್ಯವಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಾಸ್ತವಾಂಶಗಳನ್ನು ಜನರಿಗೆ ತಿಳಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ನಿರಂತರವಾಗಿ ಡ್ರಗ್ಸ್ ವಿರೋಧಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ಅವಧಿಯಲ್ಲಿ ಸುಮಾರು 165 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು. ಇತ್ತೀಚೆಗೆ ಮಹಾರಾಷ್ಟ್ರ ಪೊಲೀಸರು ಒಬ್ಬ ಆರೋಪಿ ನೀಡಿದ ಸುಳಿವಿನ ಆಧಾರದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕರ್ನಾಟಕ ಪೊಲೀಸರು ಸಹ ಭಾಗಿಯಾಗಿದ್ದರು.
ಆದರೆ 56 ಅಥವಾ 58 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಿಕ್ಕಿದೆ ಎನ್ನುವುದು ತಪ್ಪು ಮಾಹಿತಿ. ವಾಸ್ತವದಲ್ಲಿ ಕೇವಲ 5 ಕೆಜಿ ಡ್ರಗ್ಸ್ ಪತ್ತೆಯಾಗಿದ್ದು, ಅದರ ಮೌಲ್ಯ ಸುಮಾರು 1.20 ಲಕ್ಷ ರೂ. ಮಾತ್ರ ಎಂದು ಅವರು ಸ್ಪಷ್ಟಪಡಿಸಿದರು. ಹೊಸ ವರ್ಷದ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಮಂದಿ ಮುಂಚಿತವಾಗಿ ಸ್ಟಾಕ್ ಮಾಡಿಕೊಂಡಿರಬಹುದು, ಇದು ಸಾಮಾನ್ಯ ಎಂದರು.

