ಡಿ.24-25 ರಂದು ಜೇನು ಹಬ್ಬ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಮನವಿ

ಹೊಸದಿಗಂತ ವರದಿ ಮಡಿಕೇರಿ:

ಕಳೆದ ವಾರಾಂತ್ಯದಲ್ಲಿ ಹಮ್ಮಿಕೊಂಡಿದ್ದ ಕಾಫಿ ಹಬ್ಬ ಯಶಸ್ವಿಯಾಗಿರುವ ಬೆನ್ನಲ್ಲೇ ಜೇನು ಹಬ್ಬ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಡಿ.24 ಮತ್ತು 25 ರಂದು ‘ಜೇನು ಹಬ್ಬ’ ನಡೆಯಲಿದ್ದು, ಜಿಲ್ಲೆಯ ಜೇನು ಕೃಷಿಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಡಗು ಜೇನು ಕೃಷಿಗೆ ಹೆಸರುವಾಸಿಯಾಗಿದ್ದು, ಜೇನು ಕೃಷಿ ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ಕೃಷಿ ವಿಸ್ತರಣಾ ಘಟಕ, ಭಾಗಮಂಡಲ ಮತ್ತು ವೀರಾಜಪೇಟೆಯ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘದ ಸಹಯೋಗದಲ್ಲಿ ನಗರದ ರಾಜಸೀಟು ಉದ್ಯಾನವನದಲ್ಲಿ ‘‘ಜೇನು ಹಬ್ಬ’ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಡಿಕೇರಿ ರಾಜಸೀಟು ಸೇರಿದಂತೆ ವಿವಿಧ ಪ್ರದೇಶಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ವಿಶೇಷ ಮೇಳವನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.

ವೈನ್ ಮೇಳ: ಮುಂದಿನ ದಿನಗಳಲ್ಲಿ ವೈನ್ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಜೊತೆಗೆ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್ ಅವರು ಇದುವರೆಗೆ 20 ವಿವಿಧ ಜೇನು ಉತ್ಪನ್ನ ಸಹಕಾರ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದು, ಪುತ್ತೂರು, ಸುಳ್ಯ ಭಾಗದಿಂದಲೂ ಜೇನು ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಅವಕಾಶ ಕಲ್ಪಿಸುವಂತೆ ಅರ್ಜಿ ಸಲ್ಲಿಕೆಯಾಗಿದೆ.

ಎಲ್ಲರಿಗೂ ಅವಕಾಶ ನೀಡಲಾಗುವುದು ಎಂದರು. ಜೇನು ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತೀ ಆರ್ಥಿಕ ವರ್ಷದಲ್ಲಿ ಸಹಾಯಧನ ಕಲ್ಪಿಸಲಾಗುತ್ತದೆ. ಇದೊಂದು ನಿರಂತರ ಕಾರ್ಯಕ್ರಮವಾಗಿದೆ ಎಂದು ಪ್ರಮೋದ್ ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಜೇನು ಕೃಷಿ ಅಭಿವೃದ್ಧಿ ಅಧಿಕಾರಿ ಬಿ.ಡಿ.ವಸಂತ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!