ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.