ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಏಳು ಮಂದಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ.
ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ 37 ಮಂದಿ ಪ್ರಯಾಣಿಕರಿದ್ದರು. ಹತ್ತಿಗುಡೂರು ಸಮೀಪದ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಈ ಅವಘಡದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಕ್ಷಣ ಮಾಹಿತಿ ಪಡೆದ ಸುರಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ನಲ್ಲಿ ಸಿಲುಕಿದ್ದ ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.