ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ–206ರಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿಪಟೂರಿನಿಂದ ತುಮಕೂರು ಕಡೆಗೆ ಸಾಗುತ್ತಿದ್ದ ಕಾರು ಅಚಾನಕ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಕಾರಿನ ಎಂಜಿನ್ ಭಾಗದಿಂದ ಹೊಗೆ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಕಾರು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿ ಸುಟ್ಟುಹೋಗಿದೆ. ಘಟನೆ ನಡೆದ ಸಮಯದಲ್ಲಿ ಕಾರಿನೊಳಗಿದ್ದವರು ತಕ್ಷಣ ಹೊರಬಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Rice series 28 | ಮೆಂತೆ ಸೊಪ್ಪಿನ ಬಾತ್: ಆರೋಗ್ಯಕರ ಬ್ರೇಕ್ ಫಾಸ್ಟ್ ಗೆ ಇದೇ ನೋಡಿ ಬೆಸ್ಟ್ ಆಪ್ಷನ್
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಅಪಘಾತದ ಬಳಿಕ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರವನ್ನು ನಿಯಂತ್ರಿಸಿದರು.

