ಹೊಸದಿಗಂತ ವರದಿ ಕುಶಾಲನಗರ:
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 70 ವರ್ಷದ ವೃದ್ಧೆ ಮೃತಪಟ್ಟ ಘಟನೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ನಡೆದಿದೆ.
ಮೃತರನ್ನು ನಾಗಮ್ಮ (70) ಎಂದು ಗುರುತಿಸಲಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಸಮೀಪದ ಮೂದಗನಹಳ್ಳಿ ಗ್ರಾಮದವರಾದ ನಾಗಮ್ಮ, ಮೊಮ್ಮಗನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ:
ಡಿಕ್ಕಿಯ ರಭಸಕ್ಕೆ ನಾಗಮ್ಮ ರಸ್ತೆಗೆ ಬಿದ್ದಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



