ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌದಿ ಅರೇಬಿಯಾದಲ್ಲಿ ಭಾರತೀಯ ಯಾತ್ರಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ 42 ಭಾರತೀಯರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ ಈ ದುರಂತಕ್ಕೆ ತುತ್ತಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ನೋವಾಗಿದೆ. ಈ ಭೀಕರ ಅವಘಡದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಗಾಯಗೊಂಡಿರುವ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಿ, ಭಾರತದ ರಿಯಾದ್‌ನಲ್ಲಿರುವ ಹಾಗೂ ಜೆಡ್ಡಾದ ರಾಯಭಾರಿ ಕಚೇರಿಗಳು ಎಲ್ಲ ರೀತಿಯ ಸಹಾಯವನ್ನು ಒದಗಿಸಲಿವೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

