ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಮಾಗಡಿ ತಾಲ್ಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಅತೀ ವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಇಬ್ಬರು ಯುವಕರು ಬೆಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದರು. ಆದರೆ ಬೈಕ್ ವೇಗ ಅಧಿಕವಾಗಿದ್ದರಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆಯ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುದೂರು ಪೊಲೀಸ್ ಠಾಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸಾವನ್ನಪ್ಪಿದ ಇಬ್ಬರು ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಪೋಸ್ಟ್‌ಮಾರ್ಟಮ್ ಬಳಿಕ ಗುರುತಿನ ದೃಢೀಕರಣ ನಡೆಯಲಿದೆ.
ಈ ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

