ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ವೆಂಕಟಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರನ್ನು ಭಟ್ಕಳ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿ ಅವರ ಪುತ್ರರಾದ ಬಿಲಾಲ್ (15) ಮತ್ತು ಆಯಾನ್ (20) ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಕಾರು ಚಲಾಯಿಸುತ್ತಿದ್ದ ಆಯಾನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಶಿರಾಲಿಯಿಂದ ಭಟ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನ ವೇಗ ಅಥವಾ ನಿಯಂತ್ರಣ ತಪ್ಪಿದ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


