ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದು ತಡರಾತ್ರಿ ಸಂಭವಿಸಿದ ಭೀಕರ ಅವಘಡದಲ್ಲಿ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:
ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ಶಾರದಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50) ಹಾಗೂ ರೋಷನ್ ಗಜಾನನ ದಮೋನೆ (21) ಮೃತಪಟ್ಟಿದ್ದಾರೆ. ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಗಂಭೀರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಘಟನೆಯ ವಿವರ:
ಮನೆಯಲ್ಲಿದ್ದ ಫ್ರಿಜ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದೇ ಅಗ್ನಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ವ್ಯಾಪಿಸಿದೆ. ಗಾಢ ನಿದ್ರೆಯಲ್ಲಿದ್ದ ಮನೆಯವರು ಬೆಂಕಿಯ ಕೆನ್ನಾಲಿಕೆಯಿಂದ ಹೊರಬರಲಾಗದೆ ಒಳಗಡೆಯೇ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ.
ಗಣೇಶೋತ್ಸವದ ಸಂಭ್ರಮದಲ್ಲಿದ್ದ ಬೆಳಗಾವಿ ನಗರದಲ್ಲಿ ಈ ಭೀಕರ ಘಟನೆ ನಡೆದಿದ್ದು, ಸ್ಥಳೀಯರು ತೀವ್ರ ದಿಗ್ಭ್ರಮೆಗೊಂಡಿದ್ದಾರೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.



