ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಲಖನೌ–ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜಸ್ಥಾನದ ರೇವಾರಿಯಿಂದ ಬಿಹಾರದ ಛಾಪ್ರಾ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 50ರಿಂದ 60 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಪಘಾತದಲ್ಲಿ ಮೃತಪಟ್ಟ ಮೂವರ ಪೈಕಿ ಒಬ್ಬರನ್ನು ಕೆಜಿಎಂಯು ಟ್ರಾಮಾ ಸೆಂಟರ್ಗೆ ಕರೆತಂದಾಗಲೇ ಮೃತಪಟ್ಟಿದ್ದರು. ಉಳಿದ ಇಬ್ಬರು ಲೋಕಬಂಧು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಒಟ್ಟು 45 ಗಾಯಾಳುಗಳ ಪೈಕಿ 31 ಮಂದಿಗೆ ಲೋಕಬಂಧು ಆಸ್ಪತ್ರೆಯಲ್ಲಿ ಹಾಗೂ 13 ಮಂದಿಗೆ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ.
ಇದನ್ನೂ ಓದಿ:
ಸಿಎಂ ಯೋಗಿ ಸೂಚನೆ, ತನಿಖೆಗೆ ಆದೇಶ
ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳ ಕುಟುಂಬಸ್ಥರನ್ನು ಸಂಪರ್ಕಿಸಿ ಅಗತ್ಯ ನೆರವು ಒದಗಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಬ್ರಜೇಶ್ ಪಾಠಕ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೂ ಆದೇಶಿಸಲಾಗಿದೆ.



