ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ತಿಳಿಸಿದರು. ಅಲ್ಲದೇ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಕಾಂಪೌಂಡ್ ಗೋಡೆ ಕುಸಿತಕ್ಕೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ವೇಳೆ ಘಟನಾ ಸ್ಥಳದಿಂದ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ,ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಅತ್ಯಂತ ಗುಣಮಟ್ಟದ ಮತ್ತು ಉಚಿತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.



