ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಕಲಿಕೆಯನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಹೊಸ ನಿಯಮದ ವಿರುದ್ಧ ಈಗ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭವಾಗಿದೆ. ದೇಶಾದ್ಯಂತದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಜಂಟಿಯಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಂದಿನ ವಾರ ವಿಚಾರಣೆ ನಡೆಸಲು ದೇಶದ ಅತ್ಯುನ್ನತ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.
ವಿದ್ಯಾರ್ಥಿಗಳ ಮೇಲಿನ ಹೊರೆಗೆ ಹಿರಿಯ ವಕೀಲರ ಆಕ್ಷೇಪ:
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಈ ಅರ್ಜಿಯನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಪ್ರಸ್ತಾಪಿಸಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಅವರು, “ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿರುವಾಗ, 9ನೇ ತರಗತಿಯಲ್ಲಿ ಇದ್ದಕ್ಕಿದ್ದಂತೆ ಹೆಚ್ಚುವರಿ ಭಾಷೆಗಳನ್ನು ಕಲಿಯಬೇಕು ಎಂಬ ನಿಯಮ ಜಾರಿಗೆ ತರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುತ್ತದೆ. ಇದು ಮುಂದಿನ ವರ್ಷದ 10ನೇ ತರಗತಿಯ ಬೋರ್ಡ್ ಪರೀಕ್ಷೆಯ ತಯಾರಿಯ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದ ವಿದ್ಯಾರ್ಥಿಗಳ ಮೇಲೆ ಅನಗತ್ಯ ಮಾನಸಿಕ ಒತ್ತಡ ಸೃಷ್ಟಿಯಾಗುತ್ತದೆ,” ಎಂದು ಕೋರ್ಟ್‌ಗೆ ವಿವರಿಸಿದರು.
ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ:
“ಹೊಸ ಭಾಷೆಯನ್ನು 9ನೇ ತರಗತಿಯಲ್ಲಿ ಕಡ್ಡಾಯವಾಗಿ ಕಲಿತು, ಕೇವಲ ಒಂದು ವರ್ಷದಲ್ಲಿ 10ನೇ ತರಗತಿಯಲ್ಲಿ ಅದಕ್ಕೆ ಸಿದ್ಧರಾಗುವುದು ಹೇಗೆ? ಇದು ಶೈಕ್ಷಣಿಕ ವಲಯದಲ್ಲಿ ದೊಡ್ಡ ಅವ್ಯವಸ್ಥೆಯನ್ನು ಸೃಷ್ಟಿಸಲಿದೆ,” ಎಂದು ರೋಹಟಗಿ ಅವರು ತುರ್ತು ವಿಚಾರಣೆಗೆ ವಿನಂತಿಸಿದರು. ವಾದವನ್ನು ಆಲಿಸಿದ ಸಿಜೆಐ ಸೂರ್ಯ ಕಾಂತ್ ಅವರ ಪೀಠವು, ವಿಷಯದ ಗಂಭೀರತೆಯನ್ನು ಪರಿಗಣಿಸಿ ಮುಂದಿನ ವಾರ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ. ಸಿಬಿಎಸ್‌ಇಯ ಈ ಹೊಸ ಭಾಷಾ ಸೂತ್ರದ ಭವಿಷ್ಯ ಏನಾಗಲಿದೆ ಎಂಬುದು ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶದ ಮೇಲೆ ನಿರ್ಧಾರವಾಗಲಿದೆ.



