ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಲ್ವಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಸೈನಿಕರ ಬಗ್ಗೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಿಜವಾದ ಭಾರತೀಯ ವ್ಯಕ್ತಿ ಈ ರೀತಿ ಮಾತನಾಡುವುದಿಲ್ಲ ಎಂದು ಸುಪ್ರೀಂ ಚಾಟಿ ಬೀಸಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ನೀಡಿದ್ದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ಎ.ಜಿ. ಮಸಿಹ್ ಪೀಠವು ರಾಹುಲ್ ಗಾಂಧಿ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ದತ್ತಾ ಪ್ರತಿಕ್ರಿಯಿಸಿ, ಚೀನಾ ಭೂ ಸ್ವಾಧೀನಪಡಿಸಿಕೊಂಡ ಮಾಹಿತಿ ನಿಮಗೆ ಹೇಗೆ ತಿಳಿಯುತ್ತದೆ? 2,000 ಚದರ ಕಿ.ಮೀ ಪ್ರದೇಶವನ್ನು ಚೀನಿಯರು ಆಕ್ರಮಿಸಿಕೊಂಡಿದ್ದಾರೆ ಎಂದು ನೀವು ಹೇಗೆ ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಈ ಆರೋಪಕ್ಕೆ ಯಾವುದೇ ವಿಶ್ವಾಸಾರ್ಹ ಸಾಕ್ಷ್ಯವಿದೆಯೇ? ಗಡಿಯಲ್ಲಿ ಸಂಘರ್ಷ ಉಂಟಾದಾಗ ಇದನ್ನೆಲ್ಲಾ ಹೇಳಬಲ್ಲಿರಾ? ಯಾವುದೇ ಸಾಕ್ಷ್ಯ ಇಲ್ಲದೇ ಈ ರೀತಿಯ ಹೇಳಿಕೆಗಳನ್ನು ಯಾಕೆ ನೀಡುತ್ತೀರಿ? ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆಗಳನ್ನು ನೀಡುತ್ತಿರಲಿಲ್ಲ ಎಂದು ಖಡಕ್ ಉತ್ತರ ನೀಡಿದೆ.