ಮಸೀದಿ ಆವರಣದಲ್ಲಿ‘ಜೈ ಶ್ರೀ ರಾಮ್’ ಘೋಷಣೆ ಕೂಗಿದರೆ ಹೇಗೆ ಅಪರಾಧ ?: ಸುಪ್ರೀಂ ಕೋರ್ಟ್ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಸೀದಿ ಆವರಣದಲ್ಲಿ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈದರ್ ಅಲಿ ಸಿ ಎಂ ಅವರು ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಯಿತು ಎಂದು ದೂರುದಾರರನ್ನು ಪ್ರಶ್ನಿಸಿದೆ.

ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ಪೀಠ ಪ್ರಶ್ನಿಸಿತು.

ಅಂತಿಮವಾಗಿ ದೂರುದಾರರು ಸಲ್ಲಿಸಿದ ಮೇಲ್ಮನವಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ನೀಡುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿ ತಿಂಗಳಿನಲ್ಲಿ ನಡೆಸುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ- ಮರ್ದಾಳ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ ನುಗ್ಗಿದ್ದ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ʼಜೈ ಶ್ರೀ ರಾಮ್ʼ ಎಂದು ಕೂಗಿದ್ದರು ಹಾಗೂ ಬ್ಯಾರಿಗಳನ್ನು (ಮುಸ್ಲಿಮರು) ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬುದಾಗಿ ಆರೋಪಿಸಲಾಗಿತ್ತು.

ಐಪಿಸಿ ಸೆಕ್ಷನ್‌ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು), 447 (ಅತಿಕ್ರಮಣ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಆರೋಪಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಬಳಿಕ ಅವರಿಬ್ಬರೂ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!