ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಅಸನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಶುರುವಾಗುತ್ತಿದ್ದು, ಬಿಸಿಲಿನಿಂದ ಬಸವಳಿದ ಭೂಮಿಗೆ ಮಳೆರಾಯ ತಂಪೆರೆದಿದ್ದು, ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಗಿರಿನಗರ, ಬಸವನಗುಡಿ, ಲಾಲ್ಬಾಗ್, ಯಶವಂತಪುರ, ಮಲ್ಲೇಶ್ವರ ಸೇರಿ ನಗರದ ಹಲವೆಡೆ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಮಾರ್ಚ್ 24ರ ತನಕ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಅಸನಿ ಚಂಡಮಾರುತದ ಅಬ್ಬರ ಶುರುವಾಗಲಿದ್ದು, ಹೀಗಾಗಿ ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ ಅಲರ್ಟ್ ಆಗಿರಲು ಸೂಚಿಸಿದ್ದು,ಹಡಗುಗಳು, ವಿಮಾನಗಳು, ಹೆಲಿಕಾಪ್ಟರ್‌ಗಳು, ಡೈವಿಂಗ್ ಮತ್ತು ವಿಪತ್ತು ಪರಿಹಾರ ತಂಡಗಳು ಸಿದ್ಧವಾಗಿವೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸುಮಾರು 100 ಸಿಬ್ಬಂದಿಯನ್ನು ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ನಿಯೋಜಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡು, ಕರ್ನಾಟಕದ ಕೆಲವೆಡೆ ಮಳೆ ಹೆಚ್ಚಾಗಿದೆ.
ಅಸನಿ ಚಂಡಮಾರುತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರಕ್ಕೆ ಹೊಂದಿಕೊಂಡಂತೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಮತ್ತು ಉತ್ತರಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.