ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸದಿಗಂತ ವರದಿ,ಮಂಗಳೂರು:
ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಪರಿಣಾಮ ಉಂಟಾದ ಪ್ರವಾಹದಿಂದ ನೀರು ನುಗ್ಗಿದ ಮನೆಗಳಿಗೆ ತಕ್ಷಣ ತಲಾ ಹತ್ತು ಸಾವಿರ ರೂ. ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಭಾಗಶಃ ಹಾನಿಯಾದ ಮನೆಗಳಿಗೆ ಒಂದು ಲಕ್ಷ ರೂ., ಪೂರ್ತಿ ಹಾನಿಯಾದ ಮನೆಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಮಂಗಳೂರಿನ ಎನ್ಎಂಪಿಟಿಯಲ್ಲಿ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚಂಡಮಾರುತ ಸಂತ್ರಸ್ತರಿಗೆ ಆರು ಕಾಳಜಿ ಕೇಂದ್ರ ತೆರೆಯಲಾಗಿದ್ದು, ಮಂಗಳೂರಿನಲ್ಲಿ 168 ಮಂದಿ ಆಶ್ರಯ ಪಡೆದಿದ್ದಾರೆ. 87ಮನೆಗಳು ಹಾನಿಗೀಡಾಗಿವೆ. ಈ ಪೈಕಿ 63 ಮನೆಗಳು ಭಾಗಶಃ, 24 ಮನೆಗಳು ಪೂರ್ತಿ ಹಾನಿಯಾಗಿವೆ. ಈ ಎಲ್ಲ ಮನೆಗಳಿಗೆ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ರಸ್ತೆ, ಬೆಳೆಹಾನಿ, ಮೆಸ್ಕಾಂಗೆ ಉಂಟಾದ ನಷ್ಟದ ಬಗ್ಗೆ ಆಯಾ ಇಲಾಖೆ ಮೂಲಕ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಗೆ ಸೂಚಿಸಲಾಗಿದೆ ಎಂದರು.
ಕಾಪು ಬಳಿ ಅಪಾಯಕ್ಕೆ ಸಿಲುಕಿದ ಟಗ್ ಮೇ 14ರಂದು ವಾಪಸ್ ಆಗಬೇಕಿತ್ತು. ಯಾಕೆ ತಡವಾಗಿದೆ, ಘಟನೆಗೆ ಯಾರು ಹೊಣೆ, ಯಾರಿಂದ ತಪ್ಪಾಗಿದೆ ಎಂಬುದನ್ನು ತಿಳಿಯಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ತನಿಖೆಯ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಸೂಚಿಸಲಾಗಿದ್ದು, ಪರಿಹಾರ ನೀಡಲು ಎಂಆರ್ಪಿಎಲ್ ಒಪ್ಪಿಕೊಂಡಿದೆ ಎಂದರು.
ಚಂಡಮಾರುತದಿಂದ ಹಾನೀಗೀಡಾದ ಪ್ರದೇಶಗಳನ್ನು ವೀಕ್ಷಿಸಿ, ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುವುದು. ಮಂಗಳವಾರ ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಅಶೋಕ್ ತಿಳಿಸಿದರು.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು